ಬೆಂಗಳೂರು: 2020-21ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಸೋಮವಾರ ಬೆಳಿಗ್ಗೆ ಮಹತ್ವದ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಮತ್ತು ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ ನ್ಯಾಯಾಲಯದ ತೀರ್ಪಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಮುಂದಿನ ಕ್ರಮ ಕುರಿತು ನಿರ್ಧರಿಸಲಾಗುವುದು ಎಂದಿದ್ದಾರೆ.
2020-21ರಲ್ಲಿ ಕೊರೋನಾ ಕಾರಣದಿಂದಾಗಿ ಪಿಯುಸಿ ಪರೀಕ್ಷೆ ನಡೆಸದೆ, ತೇರ್ಗಡೆ ಮಾಡಲಾಗಿತ್ತು. ನಂತರ ಸಿಇಟಿ ನಡೆಸಿ, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ, ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
ಆದರೆ, ಹೀಗೆ ಪ್ರವೇಶಾವಕಾಶ ಪಡೆದುಕೊಂಡ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಬರೆದಿದ್ದರು. ಅಲ್ಲದೆ, ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ದ್ವಿತೀಯ ಪಿಯುಸಿ ಅಂಕಗಳನ್ನು ಕೂಡ ಪರಿಗಣಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು.